ಔರಾದ: ಬೀದರ ಜಿಲ್ಲೆಯಾದ್ಯಂತ ಸಂಚರಿಸಿದ ವಿಜಯ ಸಂಕಲ್ಪ ಯಾತ್ರೆಯಲ್ಲಿ ನಿರೀಕ್ಷೆಗೂ ಮೀರಿ ಜನ ಭಾಗವಹಿಸಿ ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ.
ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕರಿಸಿದ ಪಕ್ಷದ ಪದಾಧಿಕಾರಿಗಳು, ಮುಖಂಡರು, ಶಕ್ತಿ ಕೇಂದ್ರ, ಮಹಾ ಶಕ್ತಿ ಕೇಂದ್ರ, ಮಂಡಲ, ಜಿಲ್ಲಾಧ್ಯಕ್ಷರು, ಪ್ರಭಾರಿಗಳು, ಮೋರ್ಚಾ ಪ್ರಮುಖರು, ಕಾರ್ಯಕರ್ತರು ಮತ್ತು ಸಾರ್ವಜನಿಕರಿಗೆ ಪಶು ಸಂಗೋಪನೆ ಇಲಾಖೆ ಸಚಿವರು ಹಾಗೂ ಯಾತ್ರೆಯ ಜಿಲ್ಲಾ ಸಂಚಾಲಕರಾದ ಪ್ರಭು.ಬಿ ಚವ್ಹಾಣ ಧನ್ಯವಾದ ಸಲ್ಲಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಚಿವರು, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ನೇತೃತ್ವದ ಯಾತ್ರೆಗೆ ಚುನಾವಣಾ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣದಲ್ಲಿ ಚಾಲನೆ ನೀಡಿದ್ದರು.
ಯಾತ್ರೆಗೆ ಬಸವಕಲ್ಯಾಣ, ಹುಮನಾಬಾದ, ಭಾಲ್ಕಿ, ಔರಾದ(ಬಿ), ಬೀದರ ಉತ್ತರ ಮತ್ತು ದಕ್ಷಿಣ ಕ್ಷೇತ್ರಗಳಲ್ಲಿ ಅಭೂತಪೂರ್ವ ಬೆಂಬಲ ಸಿಕ್ಕಿದೆ. ವಿಶೇಷವಾಗಿ ಔರಾದ(ಬಿ) ಕ್ಷೇತ್ರದಲ್ಲಿ ಸೇರಿದ್ದ ಜನಸಾಗರ ನನ್ನನ್ನು ಮಂತ್ರಮುಗ್ದವಾಗಿಸಿದೆ. ಜಿಲ್ಲೆಯ ಎಲ್ಲ ಕಡೆಗಳಲ್ಲಿ ಸೇರಿದ್ದ ಅಪಾರ ಜನಸಂಖ್ಯೆಯು ಜನ ಅಭಿವೃದ್ಧಿ ಪರವಾದ ಬಿಜೆಪಿ ನೇತೃತ್ವದ ಸರ್ಕಾರದ ಪರವಾಗಿದ್ದಾರೆ ಎಂಬ ಸಂದೇಶ ರವಾನಿಸಿದ್ದಾರೆ ಎಂದು ಹೇಳಿದ್ದಾರೆ.
ಕೇಂದ್ರ ಸಚಿವ ಅಮಿತ್ ಶಾ ಆಗಮನದಿಂದ ಜಿಲ್ಲೆಯ ಬಿಜೆಪಿಗೆ ಆನೆ ಬಲ ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟಪೂರ್ವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಜಿಲ್ಲೆಗೆ ಆಗಮಿಸಿದ್ದರಿಂದ ಪಕ್ಷಕ್ಕೆ ಹೊಸ ಚೈತನ್ಯ ಸಿಕ್ಕಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ಸಚಿವ ಬಿ. ಶ್ರೀರಾಮುಲು, ಮಾಲೀಕಯ್ಯಾ ಗುತ್ತೇದಾರ, ಸಿದ್ದರಾಜು, ರಘುನಾಥರಾವ ಮಲ್ಕಾಪುರೆ, ಶಿವಾನಂದ ಮಂಠಾಳಕರ, ಬಾಬುರಾವ ಚಿಂಚನಸೂರ, ಅಮರನಾಥ ಪಾಟೀಲ ಸೇರಿದಂತೆ ಪಕ್ಷದ ಹಿರಿಯರು ಪಕ್ಷದ ಬೆಳವಣಿಗೆಗೆ ಶ್ರಮಿಸುತ್ತಿರುವ ಕಾರ್ಯಕರ್ತರ ಉತ್ಸಾಹವನ್ನು ಹೆಚ್ಚಿಸಿದ್ದಾರೆ ಎಂದು ಹೇಳಿದ್ದಾರೆ.
ಇದೇ ಉತ್ಸಾಹದೊಂದಿಗೆ ಎಲ್ಲ ಬೂತ್‌ಗಳಲ್ಲಿ ಸಂಚರಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪರ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಬೂತ್ ಮಟ್ಟದಲ್ಲಿ ಪಕ್ಷದ ಶಕ್ತಿಯನ್ನು ಹೆಚ್ಚಿಸಬೇಕೆಂದು ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರಲ್ಲಿ ಸಚಿವರು ಮನವಿ ಮಾಡಿದ್ದಾರೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಡಬಲ್ ಇಂಜಿನ್ ಸರ್ಕಾರ ಬಹಳಷ್ಟು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಬಡವರು, ರೈತರು, ಮಹಿಳೆಯರ ಪರವಾಗಿ ಕೆಲಸ ಮಾಡುತ್ತಿದೆ. ಮುಂದೆ ರಾಜ್ಯದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 151 ಸ್ಥಾನಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಲಿದೆ. ಹಾಗೆಯೇ ಬೀದರ ಜಿಲ್ಲೆಯ ಎಲ್ಲ ಆರು ಕ್ಷೇತ್ರಗಳಲ್ಲಿ ಬಿಜೆಪಿಯ ಅಭ್ಯರ್ಥಿಗಳು ವಿಜಯಶಾಲಿಯಾಗಲಿದ್ದಾರೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ತಿಳಿಸಿದ್ದಾರೆ.